ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ (ಗುರುವಾರ) ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಸುರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಕೆಲವೆಡೆ ಗುಡುಗು ಸಹಿತ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾತನಾಡಿ, “ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಶ್ರೀಲಂಕಾ ಕರಾವಳಿಯ ಮೇಲ್ಭಾಗದಲ್ಲಿ ವಾಯು ಚಂಡಮಾರುತದ ಪರಿಚಲನೆ ಇದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದಿಂದ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆ ಹೆಚ್ಚು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ಮಳೆಯಾಗಲಿದೆ. ಮುಖ್ಯವಾಗಿ ದಕ್ಷಿಣ ಒಳನಾಡಿನಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ನಿನ್ನೆಯಿಂದ ಕರಾವಳಿ ಕರ್ನಾಟಕ, ದಕ್ಷಿಣ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆದಿದೆ. ಅತೀ ಹೆಚ್ಚು ಮಳೆ 1 ಸೆ.ಮೀ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ದಾಖಲಾಗಿದೆ” ಎಂದು ತಿಳಿಸಿದರು.

Published by

Leave a Reply

Your email address will not be published. Required fields are marked *