
ತಮಿಳುನಾಡಿನ ಉತ್ತರ ಒಳನಾಡಿನ ಮೇಲೆ ಗುರುತಿಸಲಾದ ಫೆಂಗಲ್ ಚಂಡಮಾರುತವು ಇಂದು ಮತ್ತೆ ಅಬ್ಬರಿಸಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಇದು ಮಂಗಳವಾರದಂದು (ಡಿಸೆಂಬರ್ 3) ಆಗ್ನೇಯ ಮತ್ತು ಆಗ್ನೇಯಕ್ಕೆ ಹೊರಹೊಮ್ಮುವ ಸಾಧ್ಯತೆಯಿದೆ. ಅಲ್ಲದೆ ಉತ್ತರ ಕೇರಳ ಹಾಗೂ ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಕಡೆಗೂ ವ್ಯಾಪಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆ ಇದೆ ಎಂದು ಹೇಳಿದೆ. ಚದುರಿದ ಭಾರೀ ಮಳೆ ಜೊತೆಗೆ ಕೊಡಗು ಜಿಲ್ಲೆಯಾದ್ಯಂತ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆ, ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಡಿಸೆಂಬರ್ 3ರಂದು ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ, ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗಲಿದೆ.
ಡಿಸೆಂಬರ್ 4ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಲಘುವಾದ ಮಳೆ ಸುರಿಯಲಿದೆ.

ಡಿಸೆಂಬರ್ 5ರಿಂದ 8ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ವಿಜಯಪುರ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ, ಚಳಿಯೂ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 23 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ ಎಂದು ಹೇಳಿದೆ.
Published by
